ಬೆಂಗಳೂರು, ಏ.10 (DaijiworldNews/HR): "ಕೊರೊನಾ ಕಾರಣಕ್ಕೆ ಈಗ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಳಿಸುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ನಡೆಯಲಿದೆ" ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲ ವಿಭಾಗಗಳ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ" ಎಂದರು.
ಇನ್ನು " 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಯಲ್ಲೂ ವ್ಯತ್ಯಯ ಇಲ್ಲ. ಪರೀಕ್ಷೆಗಳು ಮುಗಿದ ಬೆನ್ನಿಗೆ ತರಗತಿ ಆರಂಭವಾಗುತ್ತವೆ. ಬೇಸಿಗೆ ರಜೆ ಇರುವುದಿಲ್ಲ. ಆಫ್ಲೈನ್ ಮತ್ತು ಆನ್ಲೈನ್ ತರಗತಿ ಇರಲಿದ್ದು, ಮೊದಲು ಆನ್ಲೈನ್ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕು" ಎಂದಿದ್ದಾರೆ.
ಕಾಲೇಜಿಗೆ ಬರುವವರಿಗೆ ಕೊರೊನಾ ಮಾರ್ಗಸೂಚಿ ಪ್ರಕಾರ ಸುರಕ್ಷತಾ ಕ್ರಮಗಳನ್ನು ಕಾಲೇಜಿನಲ್ಲಿ ಕೈಗೊಳ್ಳಲಾಗುವುದು. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್, ಸ್ವಚ್ಛತೆ, ಕೋವಿಡ್ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ" ಎಂದು ತಿಳಿಸಿದ್ದಾರೆ.