ಬೆಂಗಳೂರು, ಏ. 11 (DaijiworldNews/SM): ರಾಜ್ಯದಲ್ಲಿ ಸದ್ಯ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಮತ್ತೆಷ್ಟು ಹೆಚ್ಚಳವಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕ ಕೂಡ ಕೊರೋನಾ ಮಾರ್ಗಸೂಚಿ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ.
ಮೇ ಆರಂಭದಲ್ಲಿ ಪ್ರಕರಣಗಳು ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವರು ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಕೊನೆಯವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೋನಾ ಗರಿಷ್ಠ ಮಟ್ಟಕ್ಕೆ ತಲುಪಬಹುದು ಎಂಬುವುದು ತಜ್ಞರ ಅಭಿಪ್ರಾಯವಾಗಿದೆ ಎಂದರು.