ಬೆಂಗಳೂರು, ಏ.14 (DaijiworldNews/HR): "ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಾದರಿಯ ಕಠಿಣ ನಿಯಮಗಳನ್ನು ರಾಜ್ಯದಲ್ಲೂ ಜಾರಿ ಮಾಡಬೇಕಾದ ಅಗತ್ಯವಿದೆ" ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದ ವರ್ಷ ಈ ಅವಧಿಯಲ್ಲಿ ಸೋಂಕು ಪ್ರಮಾಣ ಹಾಗೂ ಸಾವಿನ ಪ್ರಮಾಣ ಎಷ್ಟು ಇತ್ತೋ ಈಗ ಅದೇ ಪ್ರಮಾಣದಲ್ಲಿದೆ, ಇದನ್ನು ನಿಯಂತ್ರಿಸಬೇಕಾದರೆ ಕೆಲವು ಕಠಿಣ ನಿಯಮಗಳನ್ನು ಜಾರಿ ಮಾಡುವುದು ಅನಿವಾರ್ಯ" ಎಂದರು.
ಇನ್ನು "ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಆದರೆ, ನಮ್ಮ ಮುಂದೆ ಮಹಾರಾಷ್ಟ್ರ ಮಾದರಿಯಲ್ಲಿ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ" ಎಂದಿದ್ದಾರೆ.
"ಲಾಕ್ಡೌನ್ ಹೊರತುಪಡಿಸಿ ಏನೆಲ್ಲ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಎಲ್ಲವನ್ನೂ ಭಾನುವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ" ಎಂದು ಹೇಳಿದ್ದಾರೆ.