ಬೆಂಗಳೂರು, ಎ.17 (DaijiworldNews/PY): "ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ" ಎಂದು ಮನವಿ ಮಾಡಿದ್ದಾರೆ.
ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿಎಸ್ ವೈ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಹೋಟೆಲ್ಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಬಳಿಕ ತಪಾಸಣೆಗೆ ಒಳಪಟ್ಟಾಗ ಕೊರೊನಾ ದೃಢಪಟ್ಟಿತ್ತು. ಸದ್ಯ ಅವರು ಕ್ವಾರಂಟೈನ್ನಲ್ಲಿದ್ದು, ಕೊರೊನಾ ಬಗ್ಗೆ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲು ಕಾರ್ಯ ನಿರ್ವಹಿಸುತ್ತಿದ್ದಾರೆ.