ಬೆಂಗಳೂರು, ಏ.19 (DaijiworldNews/MB) : ಪ್ರಸ್ತುತ ದೇಶದಾದ್ಯಂತ ಕೊರೊನಾ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ''ಹೊಸ ಕೊರೊನಾ ನಿಯಮವನ್ನು ನಾಳೆಯಿಂದಲೇ ಜಾರಿಗೆ ತರಲಾಗುವುದು'' ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
''ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ಸರ್ವಪಕ್ಷ ಸಭೆಗಳ ನಾಯಕರೊಂದಿಗೆ ಚರ್ಚೆ ನಡೆಯಲಿ'' ಎಂದು ಮಾಹಿತಿ ನೀಡಿದರು.
ಇನ್ನು ಮತ್ತೆ ಲಾಕ್ಡೌನ್ ಆಗಲಿದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ''ಲಾಕ್ಡೌನ್ ಒಂದೇ ಪರಿಹಾರವಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೆಲವು ಚಟುವಟಿಕೆಗೆ ಕಡಿವಾಣ ಹಾಕಬೇಕಾಗುತ್ತದೆ. ಬಿಗಿಯಾದ ಕ್ರಮ ಕೈಗೊಳ್ಳಬೇಕಾಗುತ್ತದೆ'' ಎಂದು ಹೇಳಿದರು.
''ಹಾಗೆಯೇ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಅಧಿಕವಾಗುತ್ತಿದೆ. ಬೆಡ್, ಐಸಿಯುಗಳ ಕೊರತೆ ಉಂಟಾಗುತ್ತಿದೆ'' ಎಂದು ಒಪ್ಪಿಕೊಂಡ ಸಚಿವರು ''ಈ ನಿಟ್ಟಿನಲ್ಲಿ ಸಭೆ ನಡೆಸಲಾಗುತ್ತದೆ'' ಎಂದು ತಿಳಿಸಿದರು.
''ಸಾಧ್ಯವಾದರೆ ಇಂದೇ ಬೆಂಗಳೂರಿಗೆ ಸಂಬಂಧಪಟ್ಟಂತೆ ನಿಯಮ ಜಾರಿಗೆ ತರಲಾಗುವುದು. ಇಲ್ಲವಾದರೆ ನಾಳೆ ಸರ್ವಪಕ್ಷ ನಾಯಕರ ಜೊತೆ ಚರ್ಚೆ ನಡೆಸಿ ಹೊಸ ನಿಯಮ ಜಾರಿಗೆ ತರಲಾಗುವುದು'' ಎಂದು ಹೇಳಿದರು.