ಬೆಂಗಳೂರು, ಏ.19 (DaijiworldNews/MB) : ''ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುತ್ತದೆ'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಖಾಸಗಿ ಆಸ್ಪತ್ರೆಗಳು ಬೆಡ್ ನೀಡಲು 48 ಗಂಟೆ ಸಮಯವಕಾಶ ಕೇಳಿದ್ದು ಸರ್ಕಾರ ನಿಗದಿಪಡಿಸಿದ ಹಾಸಿಗೆ ವ್ಯವಸ್ಥೆಯನ್ನು ಖಾಸಗಿಯವರು ಮಾಡಲೇಬೇಕು. ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಸರ್ಕಾರ ನಿಗದಿ ಮಾಡಿರುವ ಶೇ. 50 ರಷ್ಟು ಬೆಡ್ಗಳನ್ನು ನೀಡಲೇಬೇಕು. ಇಲ್ಲದೆ ಹೋದರೆ ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗುವುದು'' ಎಂದು ತಿಳಿಸಿದ್ದಾರೆ.
''ಈಗಾಗಲೇ ಬೇರೆ ರೋಗಿಗಳು ಬೆಡ್ನಲ್ಲಿ ಇರುವಾಗ ಖಾಸಗಿ ಆಸ್ಪತ್ರೆಗಳು ಏಕಾಏಕಿ ಅವರನ್ನು ಕಳುಹಿಸಲಾಗುವುದಿಲ್ಲ. ಈ ಬಗ್ಗೆ ಈಗಾಗಲೇ ಖಾಸಗಿ ಆಸ್ಪತ್ರೆಗಳ ಜೊತೆ ಮಾತುಕತೆ ನಡೆಸಲಾಗಿದೆ. ರೋಗಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.