ನವದೆಹಲಿ, ಏ. 20 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಮೇ.2ರಿಂದ ಆರಂಭಗೊಂಡು, ಮೇ.17 ರವರೆಗೆ ನಡೆಯಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, "ಮೇ 2ರಿಂದ ಆರಂಭವಾಗಬೇಕಿದ್ದಂತ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೊನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಈ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ" ಎಂಬುದಾಗಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತೆಯನ್ನು ನಿರ್ಧರಿಸಲು ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್ ಎಫ್) ನೀಡಲು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ.