ಬೆಂಗಳೂರು, ಏ. 20 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರು ಮುಷ್ಕರ ನಡೆಸುತ್ತಿದ್ದು, ಇದನ್ನು ಹೈಕೋರ್ಟ್ ತರಾಟೆಗೆತ್ತಿಕೊಂಡಿದೆ. ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಕರ್ತವ್ಯಕ್ಕೆ ಹಾಜರಾಗಬೇಕೆಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ.
ಸಾರಿಗೆ ಮುಷ್ಕರದ ವಿರುದ್ಧ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ ಎಂದಿದೆ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಸಲಹೆ ನೀಡಿದೆ. ಅಲ್ಲದೆ ಈ ಸಂಬಂಧ ರಾಜ್ಯ ಸರ್ಕಾರ, ಸಾರಿಗೆ ಇಲಾಖೆ ಮತ್ತು ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಕೋವಿಡ್ ಸಂಕಷ್ಟದಿಂದಾಗಿ ಜನರು ತತ್ತರಿಸಿದ್ದಾರೆ. ಲಸಿಕಾ ಕೇಂದ್ರಕ್ಕೆ ಜನರು ಹೋಗೋದಕ್ಕೆ ಪರದಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.