ಬೆಂಗಳೂರು, ಎ.25 (DaijiworldNews/PY): "ಎಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ" ಎಂದು ಸಚಿವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಕಿನ ಹಿನ್ನೆಲೆ, ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಎಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ತಕ್ಷಣವೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ" ಎಂದಿದ್ದಾರೆ.
"ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಪೋಷಕರೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯಲು ಬದ್ಧವಾಗಿದೆ. ಪರೀಕ್ಷೆ ಮುಂದೂಡಿದ ಕಾರಣ ವಿದ್ಯಾರ್ಥಿಗಳು ವಿಚಲಿತರಾಗಬಾರದು. ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ತಯಾರು ಮಾಡಿಕೊಳ್ಳಿ" ಎಂದು ಹೇಳಿದ್ದಾರೆ.