ನವದೆಹಲಿ, ಎ.26 (DaijiworldNews/PY): "ಕೊರೊನಾ ಪರಿಸ್ಥಿತಿ ಬಗ್ಗೆ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಅಗತ್ಯವಿದ್ದಲ್ಲಿ ಮಾತ್ರವೇ ಆಸ್ಪತ್ರೆಗೆ ದಾಖಲಾಗಿ" ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸ್ ಇವು ನಮ್ಮ ಜೀವನದ ಒಂದು ಭಾಗವಾಗಿರಬೇಕು" ಎಂದು ಹೇಳಿದ್ದಾರೆ.
"ಆಕ್ಸಿಜನ್ ಲಭ್ಯತೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆಕ್ಸಿಜನ್ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. ವಾಯುಪಡೆ ಹಾಗೂ ರೈಲ್ವೆ ಅನಿಲ ಟ್ಯಾಂಕರ್ಗಳನ್ನು ಸಾಗಿಸಲು ಸಹಾಯ ಮಾಡುತ್ತಿವೆ" ಎಂದಿದ್ದಾರೆ.
"ಕೈಗಾರಿಕೆಗಳಿಕೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ಹೊರಗಡೆಯಿಂದ ಬಾಡಿಗೆ ಆಧಾರದ ಮೇಲೆ ಆಮ್ಲಜನಕ ಟ್ಯಾಂಕರ್ಗಳನ್ನು ಪಡೆದುಕೊಳ್ಳಲಾಗುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.
"ಈವರೆಗೆ ಒಟ್ಟು 14.19 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.