ಬೆಂಗಳೂರು, ಏ. 30 (DaijiworldNews/SM): ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಎತ್ತಿದ್ದು, ಕಮಲ ಮುದುಡಿದೆ. ಎರಡು ಕಡೆಗಳಾಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.
ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ 7 ಕಡೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಎರಡು ಕಡೆಗಳಲ್ಲಿ ಜೆಡಿಎಸ್ ಅಧಿಕಾರವನ್ನು ಪಡೆದುಕೊಂಡಿದೆ. ಬಳ್ಳಾರಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಿದೆ.
ರಾಮನಗರ ನಗರಸಭೆ ಕಾಂಗ್ರೆಸ್ ಕೈ ವಶವಾಗಿದೆ. ಸ್ಪಷ್ಟ ಬಹುತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಒಂದೇ ಒಂದು ವಾರ್ಡ್ ನಲ್ಲಿ ಖಾತೆ ತೆರೆಯದೆ ಮುಖಭಂಗವನ್ನು ಅನುಭವಿಸಿದೆ.
ಹಾಸನದ ಬೇಲೂರು ಪುರಸಭೆ ಮೊದಲ ಬಾರಿಗೆ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಇನ್ನು ಶಿವಮೊಗ್ಗದಲ್ಲಿ ಜಿಲ್ಲೆಯ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಬೀದರ್ ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕಿಲ್ಲ. 15 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಾಧಿಸಿದೆ.