ಬೆಂಗಳೂರು, ಮೇ.01 (DaijiworldNews/PY): ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಆದರೆ, ಕೊರೊನಾ ನಿಯಂತ್ರಣವಾಗುತ್ತಿಲ್ಲ. ಈ ಹಿನ್ನೆಲೆ ಮೇ 1ರ ಶನಿವಾರದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಜೆ 4.30ಕ್ಕೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡು, ಕೆಲವು ಸಲಹೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ. ಕೊರೊನಾ ನಿಯಂತ್ರಣ ಹಾಗೂ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಶುಕ್ರವಾರ ರಾಜ್ಯದಲ್ಲಿ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ. 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ನಿನ್ನೆ 14,884 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 11,24,909ಕ್ಕೆ ತಲುಪಿದೆ. ಇನ್ನು 3,82,690 ಸಕ್ರೀಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.