ಬೆಂಗಳೂರು, ಮೇ 01 (DaijiworldNews/MB) : ''ರಾಜ್ಯಪಾಲರು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲಾಗುವುದು'' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು, ''ವರ್ಗಾವಣೆ ಕೋರಿ ಸಲ್ಲಿಕೆಯಾಗಿರುವ ಸುಮಾರು 72 ಸಾವಿರ ಅರ್ಜಿಗಳನ್ನು ಶಿಕ್ಷಕ ಮಿತ್ರ ಆಪ್ ಮೂಲಕ ನಿರ್ವಹಿಸಿ, ಆನ್ಲೈನ್ ಮೂಲಕ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಕಾರಣದಿಂದಾಗಿ ಶಿಕ್ಷಕರು ಯಾವುದೇ ಕಾರಣಕ್ಕೂ ಭೌತಿಕ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು'' ಎಂದು ತಿಳಿಸಿದ್ದಾರೆ.
''ಸುಗ್ರೀವಾಜ್ಞೆಯಲ್ಲಿ 2019-20ನೇ ಸಾಲಿನಲ್ಲಿ ಕಡ್ಡಾಯ-ಹೆಚ್ಚುವರಿ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಒಂದು ಬಾರಿ ವಿಶೇಷ ಅವಕಾಶ ಜಾರಿಯಲ್ಲಿಡಲು, ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಮೊದಲ ಆದ್ಯತೆ ನೀಡಿ ವರ್ಗಾವಣೆ ನಡೆಸಲು ಅವಕಾಶವಿದೆ'' ಎಂದು ಮಾಹಿತಿ ನೀಡಿದರು.
ಇನ್ನು ''ಸುಮಾರು ಮೂರೂವರೆ ಸಾವಿರ ಶಿಕ್ಷಕರು ಕಡ್ಡಾಯ-ಹೆಚ್ಚುವರಿ ವರ್ಗಾವಣೆಯಿಂದ ತೊಂದರೆಗೆ ಒಳಗಾಗಿರುವ ಹಿನ್ನೆಲೆ ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೆ ಅವಕಾಶ ನೀಡುವುದು ಸರ್ಕಾರದ ಜವಾಬ್ದಾರಿ. ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನ್ಯಾಯ ದೊರಕಿಸಲು ಅತಿ ಶೀಘ್ರ ಅವಧಿಯಲ್ಲಿ ಸುಗ್ರೀವಾಜ್ಞೆಯನ್ನು ಹೊರತರಲು ಕ್ರಮಕೈಗೊಳ್ಳಲಾಗಿದೆ'' ಎಂದು ತಿಳಿಸಿದರು.
''ಯಾವುದೇ ದೂರು ದುಮ್ಮಾನಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸರಿಯಾದ ವ್ಯವಸ್ಥೆ ಜಾರಿಯಲ್ಲಿರಬೇಕು. ವರ್ಗಾವಣೆ ಪ್ರಕ್ರಿಯೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಪಾರದರ್ಶಕವಾಗಿರಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'' ಎಂದು ಕೂಡಾ ಸಚಿವರು ತಿಳಿಸಿದರು.