ಭುವನೇಶ್ವರ, ಮೇ 02 (DaijiworldNews/MB) : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಪತ್ರಕರ್ತರನ್ನು ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ್ದಾರೆ.
ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು ಪೊಲೀಸರು, ನೈರ್ಮಲ್ಯ ಕಾರ್ಯಕರ್ತರನ್ನು ಸರ್ಕಾರ ಈಗಾಗಲೇ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾಗಿದೆ. ಈಗ ಒಡಿಶಾ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಪತ್ರಕರ್ತರನ್ನು ಕೂಡಾ ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಕಚೇರಿ, ತಡೆರಹಿತ ಸುದ್ದಿ ನೀಡುವ ಮೂಲಕ ಪತ್ರಕರ್ತರು ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸಂಬಂಧಿಸಿದ ವಿಚಾರಗಳ ಬಗ್ಗೆ ಅವರು ಜನರಿಗೆ ಅರಿವು ಮೂಡಿಸುತ್ತಿದ್ದಾರೆ. ಅವರು ಕೊರೊನಾ ವಿರುದ್ದದ ಯುದ್ದಕ್ಕೆ ಬೆಂಬಲ ನೀಡುತ್ತಿದ್ದಾರೆ. ಅವರು ಕೊರೊನಾ ಯೋಧರು ಎಂದು ಹೇಳಿದೆ.