ಬೆಂಗಳೂರು, ಮೇ 03 (DaijiworldNews/MB) : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 20ಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಕೆ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ''ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು'' ಎಂದು ತಿಳಿಸಿದ್ದಾರೆ.
''ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ'' ಎಂದು ಆರೋಪಿಸಿದ್ದಾರೆ.
''ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು'' ಎಂದು ಅಭಿಪ್ರಾಯಿಸಿದ್ದಾರೆ.
''ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಕೆ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ'' ಎಂದು ಹೇಳಿದ್ದಾರೆ.