ನವದೆಹಲಿ, ಮೇ.03 (DaijiworldNews/PY): "ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳೇ ಹೈಕೋರ್ಟ್ಗಳು, ಅವುಗಳ ನೈತಿಕಸ್ಥೈರ್ಯ ಕುಸಿಯಲು ಅವಕಾಶ ನೀಡುವುದಿಲ್ಲ" ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಗಲು ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಎರಡನೇ ಅಲೆ ಹೆಚ್ಚಾಗಲು ಆಯೋಗವೇ ಹೊಣೆ. ಇದಕ್ಕಾಗಿ ಚುನಾವಣಾಧಿಕಾರಿಗಳ ಮೇಲೆ ಕೊಲೆ ಮೊಕದ್ದಮೆ ದಾಖಲಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಮದ್ರಾಸ್ ಹೈಕೋರ್ಟ್ನ ಹೇಳಿಕೆಯನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವೇಳೆ ನ್ಯಾಯಾಲಯ ಈ ಅಭಿಪ್ರಾಯ ತಿಳಿಸಿದೆ.
"ಮಾಧ್ಯಮಗಳು ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರ ವಹಿಸುತ್ತವೆ. ಹೈಕೋರ್ಟ್ಗಳಲ್ಲಿ ನಡೆಯುವ ಚರ್ಚೆಗಳನ್ನು ಮಾಧ್ಯಮಗಳು ವರದಿ ಮಾಡದಿರುವಂತೆ ತಡೆಯಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ತಿಳಿಸಿದೆ.
ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತದಲ್ಲಿ ನಡೆದ ಚುನಾವಣಾ ರ್ಯಾಲಿ ಸಭೆಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದ ಕಾರಣ, ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಸಂಬಂಧ ಚುನಾವಣಾ ಅಧಿಕಾರಿಗಳನ್ನು ಕೊಲೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿತ್ತು.