ಬೆಂಗಳೂರು, ಮೇ 4 (DaijiworldNews/MS): ರಾಜ್ಯದಲ್ಲಿ ಅಂಕೆ ಮೀರಿದ ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಆಮ್ಲಜನಕ, ಔಷಧಿ, ವೈದ್ಯಕೀಯ ಸಾಮಾಗ್ರಿ ಹಾಗೂ ಲಸಿಕೆ ಕೊರತೆ ಬಗ್ಗೆ ಚರ್ಚಿಸಲು ಮೇ.4ರ ಮಂಗಳವಾರ ಸಂಜೆ ತುರ್ತು ವಿಶೇಷ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆದಿದ್ದಾರೆ.
ಚಾಮರಾಜನಗರದಲ್ಲಿ ಸಂಭವಿಸಿದ ದುರಂತ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಾದಾತ್ಮಕ ಘಟನೆಯಾಗಿ ಬದಲಾಗಿದ್ದು ಇಂದು ನಡೆಯುವ ಸಭೆಯಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದರ ಕುರಿತು ಎಂಬುದರ ಕುರಿತು ಸರ್ಕಾರ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಮಾತ್ರವಲ್ಲದೆ ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಕರ್ಫ್ಯೂ ನಿಯಮಗಳು ಪರಿಣಾಮಕಾರಿಯಾಗಿ ಜಾರಿಗೆ ಬಾರದೇ ಇರುವುದರಿಂದ ಹಾಗೂ ಸೋಂಕು ನಿಯಂತ್ರಣಕ್ಕೆ ಬಾರದೆ ಇರುವುದರಿಂದ ಎರಡು ವಾರಗಳ ಸಂಪೂರ್ಣ ಲಾಕ್ಡೌನ್ ಮಾಡುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.
ಇದರೊಂದಿಗೆ ಚಾಮರಾಜನಗರದ ದುರಂತದಿಂದ ಸಿಎಂ ಬೇಸರಗೊಂಡಿದ್ದು, ಸಭೆಯಲ್ಲಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಸಚಿವ ಸುರೇಶ್ ಕುಮಾರ್ ಅವರಿಂದ ಸ್ಪಷ್ಟನೆಗಳನ್ನು ಕೇಳಿದ್ದು, ಸಭೆಯಲ್ಲಿ ಅಧಿಕಾರಿಗಳು ಸ್ಪಷ್ಟನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.