ಬೆಂಗಳೂರು, ಮೇ 04 (DaijiworldNews/MB) : ''ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 24 ರಿಂದ ಆರಂಭವಾಗಲಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲು ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ'' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಚರ್ಚಿಸಿದ ನಂತರ ಮಾತನಾಡಿದ ಅವರು, ''ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ಪರೀಕ್ಷೆಗಳು ಆರಂಭವಾಗುವುದಕ್ಕೂ 15-20 ದಿನಗಳ ಮೊದಲೇ ಪ್ರಕಟಿಸಲಾಗುವುದು'' ಎಂದು ತಿಳಿಸಿದ್ದಾರೆ.
''ದ್ವಿತೀಯ ಪಿಯು ಪರೀಕ್ಷೆ ಬಳಿಕ ನಡೆಸಲು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೊರೊನಾ ಕಾರಣದಿಂದಾಗಿ ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು ಈ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.
ಇನ್ನು ''ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ'' ಎಂದು ಮನವಿ ಕೂಡಾ ಸಚಿವರು ಮಾಡಿದ್ದಾರೆ.
ಈ ಹಿಂದೆ ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು.