ಹಾಸನ, ಮೇ.05 (DaijiworldNews/PY): "ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿದ ಅವರು, "ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಹಾಸನ ಜಿಲ್ಲೆ ಕೊರೊನಾ ಸೋಂಕು ಹರಡುವಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ವಾರದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶವಿದೆ. ಉಳಿದ ನಾಲ್ಕು ದಿನ ಹಾಲು, ಮೆಡಿಕಲ್ ಹೊರತುಪಡಿಸಿ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಲಾಕ್ಡೌನ್ ಮಾಡುವ ಆದೇಶ ಹೊರಡಿಸಿದ್ದೇನೆ" ಎಂದು ತಿಳಿಸಿದ್ದಾರೆ.
"ಈ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರು ಸೇರಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಅಭಿಪ್ರಾಯ ಪಡೆದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಜನರು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕು" ಎಂದು ಮನವಿ ಮಾಡಿದ್ದಾರೆ.
"ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ಸಲುವಾಗಿ ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ಕೊರೊನಾ ಕೇರ್ ಸೆಂಟರ್ ತೆರೆಯಲು ಜಿಲ್ಲಾಧಿಕಾರಿಗಳು ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು. ಹಾಸ್ಟೆಲ್ಗಳಲ್ಲಿ ಹಾಗೂ ಕೊರೊನಾ ಕೇರ್ ಸೆಂಟರ್ಗಳಲ್ಲಿ ಕರ್ತವ್ಯ ನಿರ್ವಹಿಸಲು ಗುತ್ತಿಗೆ ಆಧಾರದಲ್ಲಿ ನರ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡಲು ಹೇಳಲಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯವಾದ ಕ್ರಮ ಕೈಗೊಳ್ಳುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ದೂರವಾಣಿ ಕರೆ ಮಾಡಿದ್ದು, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅವರ ಮಾತಿನಂತೆ ಎಲ್ಲಾ ರೀತಿಯ ಕ್ರಮ ವಹಿಸಲಾಗಿದೆ" ಎಂದಿದ್ದಾರೆ.
ಜಿಲ್ಲೆಯಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡಿರುವುದರಿಂದ ಮಂಗಳವಾರ, ಗುರುವಾರ, ಶನಿವಾರ ಮದ್ಯಪಾನ ಅಂಗಡಿಗಳು ಬಂದ್ ಆಗಲಿದೆ. ರೆಸ್ಟೋರೆಂಟ್, ಬಾರ್ಗಳು ಕೂಡಾ ಸಂಪೂರ್ಣ ಬಂದ್ ಆಗಲಿವೆ.