ನವದೆಹಲಿ, ಮೇ.06 (DaijiworldNews/PY): ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಅಜಿತ್ ಸಿಂಗ್ (82) ಅವರು ಗುರುವಾರ ಕೋವಿಡ್ನಿಂದ ಮೃತಪಟ್ಟಿದ್ದಾರೆ.
ಅಜಿತ್ ಸಿಂಗ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಅವರನ್ನು ಮಂಗಳವಾರ ಉತ್ತರಪ್ರದೇಶದ ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎ. 20ರಂದು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.
ಅಜಿತ್ ಸಿಂಗ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭ ಅವರ ಸಂಪುಟದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿ ಕೆಲಸ ಮಾಡಿದ್ದರು. 197-80ರಲ್ಲಿ ರಾಜಕೀಯ ಪ್ರವೇಶಕ್ಕೂ ಮುನ್ನ ಅವರು ಅಮೇರಿಕಾದಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಹಲವರು ಅಜಿತ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, "ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರ ನಿಧನ ನೋವಿನ ಸಂಗತಿಯಾಗಿದೆ. ಅವರು ಯಾವಾಗಲೂ ರೈತರ ಹಿತಾಸಕ್ತಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದರು. ಕೇಂದ್ರದಲ್ಲಿ ಹಲವಾರು ಇಲಾಖೆಗಳ ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದರು. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ" ಎಂದಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, "ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಅಜಿತ್ ಸಿಂಗ್ ಜಿ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖಕರವಾಗಿದೆ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ನನ್ನ ಸಂತಾಪ" ಎಂದು ತಿಳಿಸಿದ್ದಾರೆ.