ಬೆಂಗಳೂರು, ಮೇ 07 (DaijiworldNews/MB) : ಕೆಲ ದಿನಗಳ ಹಿಂದೆ ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಒಟ್ಟು 6 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಮೂರು ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಕೋಲಾರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯಾಗಿಯಾಗಿ, ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಬೀದರ್ ಜಿಲ್ಲೆಯ ಉಸ್ತುವಾರಿಯಾಗಿ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಅವರಿಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಕೆಲ ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬೆಳಗಾವಿಯ, ಎಸ್ ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲೆಯ, ಉಮೇಶ್ ಕತ್ತಿ ಅವರನ್ನು ಬಾಗಲಕೋಟೆಯ, ಅರವಿಂದ ಲಿಂಬಾವಳಿ ಅವರನ್ನು ಬೀದರ್ ಜಿಲ್ಲೆಯ, ಎಂಟಿಬಿ ನಾಗರಾಜ್ ಅವರನ್ನು ಕೋಲಾರ ಜಿಲ್ಲೆಯ, ಮುರುಗೇಶ್ ನಿರಾಣಿ ಅವರನ್ನು ಕಲಬುರ್ಗಿ ಜಿಲ್ಲೆಯ ಉಸ್ತುವಾರಿಯಾಗಿ ನೇಮಿಸಲಾಗಿತ್ತು.
ಈಗ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಈ ಹಿಂದೆ ಅವರಿಗೆ ನೀಡಲಾಗಿದ್ದ ಬೀದರ್ ಜಿಲ್ಲೆಯ ಉಸ್ತುವಾರಿಯನ್ನು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ವಹಿಸಿ ಮರು ನೇಮಕ ಮಾಡಲಾಗಿದೆ.