ನವದೆಹಲಿ, ಮೇ. 08 (DaijiworldNews/HR): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರತ್ಯೇಕ ದೂರವಾಣಿ ಕರೆಗಳಲ್ಲಿ ಮಾತನಾಡಿ ಆಯಾ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ವ್ಯಾಕ್ಸಿನೇಷನ್ಗಾಗಿ ಪ್ರತ್ಯೇಕ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಅನುಮತಿ ಕೋರಿ ಬರೆದಿರುವ ಪತ್ರದ ಬಗ್ಗೆ ಪ್ರಧಾನ ಮಂತ್ರಿ ಮತ್ತು ಉದ್ಧವ್ ಠಾಕ್ರೆ ನಡುವಿನ ಸಂಭಾಷಣೆ ವೇಳೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, " ರಾಜ್ಯದಲ್ಲಿ ನಿರಂತರವಾಗಿ ಕಡಿಮೆಯಾಗುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತು ವೇಗವಾಗಿ ಹೆಚ್ಚುತ್ತಿರುವ ಚೇತರಿಕೆ ದರದ ಕುರಿತು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಜನತಾ ಕರ್ಫ್ಯೂ ಸೇರಿದಂತೆ ವೈರಸ್ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.
ಇನ್ನು ಕೊರೊನಾ ರೋಗಿಗಳಿಗೆ ಆಮ್ಲಜನಕವನ್ನು ಒದಗಿಸಲು ರಾಜ್ಯ ಸರ್ಕಾರ ಏನು ಮಾಡುತ್ತಿದೆ, ಆಸ್ಪತ್ರೆಯ ಹಾಸಿಗೆಗಳ ಸ್ಥಿತಿ ಮತ್ತು ವ್ಯಾಕ್ಸಿನೇಷನ್ ಡ್ರೈವ್ ಕುರಿತು ಮೋದಿಗೆ ಮಾಹಿತಿ ನೀಡಿದ್ದಾಗಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ.