ನವದೆಹಲಿ, ಮೇ 15 (DaijiworldNews/MB) : ತೌಕ್ತೆ ಚಂಡಮಾರುತದ ಈ ಸಂದರ್ಭದಲ್ಲಿ ತೊಂದರೆಗೆ ಒಳಗಾಗಿರುವ ಜನರಿಗೆ ಎಲ್ಲ ರೀತಿಯ ಅಗತ್ಯ ನೆರವು ಮಾಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಚಂಡಮಾರುತ ಹಿನ್ನೆಲೆ ಅಲರ್ಟ್ ನೀಡಲಾಗಿದೆ. ತೌಕ್ತೆ ಚಂಡಮಾರುತದ ಹಿನ್ನೆಲೆ ಈಗಾಗಲೇ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ'' ಎಂದು ಹೇಳಿದ್ದಾರೆ.
ಇನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆಯು, ಅರಬ್ಬಿ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವ ಹಿನ್ನೆಲೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಸೃಷ್ಟಿಯಾಗಲಿದೆ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗೋವಾ, ತಮಿಳುನಾಡು ಮತ್ತು ಗುಜರಾತ್ ಕರಾವಳಿಯಲ್ಲಿ ಇದರ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.