ಬೆಂಗಳೂರು, ಮೇ.16 (DaijiworldNews/PY): ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೀಘ್ರವೇ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ತೌಕ್ತೆ ಚಂಡಮಾರುತದ ಪರಿಣಾಮ ತೀವ್ರ ಸ್ವರೂಪದಲ್ಲಿ ಉಂಟಾಗುವ ಸಾಧ್ಯತೆ ಹಿನ್ನೆಲೆ ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರಿಗೆ ಸಿಎಂ ಬಿಎಸ್ವೈ ಅವರು ರವಿವಾರ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
"ರಾಜ್ಯ ಸರ್ಕಾರದಿಂದ ಏನೇ ತುರ್ತು ನೆರವಿನ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಸಚಿವರುಗಳಿಗೆ ಕರೆ ಮಾಡು ತಿಳಿಸಿ. ಅಥವಾ ನೇರವಾಗಿ ನನಗೆ ಕರೆ ಮಾಡಿ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಿ" ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, "ಕರಾವಳಿ ಭಾಗದಲ್ಲಿನ ಚಂಡಮಾರುತದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಸಂತ್ರಸ್ತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದಿದ್ದಾರೆ.