ನವದೆಹಲಿ, ಮೇ 18 (DaijiworldNews/MS): ಭಾರತದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ಕಳೆದ ಮೂರು ದಿನಗಳಿಂದ ಸೋಂಕಿನ ಸಂಖ್ಯೆ ಇಳಿಮುಖದತ್ತ ಸಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ.
ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ದೊಡ್ಡ ಮಟ್ಟದಲ್ಲಿ ಏರಿಕೆಯಾಗುವುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,349 ಮಂದಿ ವೈರಸ್'ಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,78,719ಕ್ಕೆ ತಲುಪಿದೆ. ಇನ್ನು ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 33,53,765ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 4,22,436 ಮಂದಿ ಚೇತರಿಸಿಕೊಂಡಿದ್ದು ಈವರೆಗೂ ಗುಣಮುಖರಾದವರ ಸಂಖ್ಯೆ 2,15,96,512ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,69,223 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇಲ್ಲಿವರೆಗೆ 31,82,92,881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,44,53,149 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.