ಬೆಂಗಳೂರು, ಮೇ.23 (DaijiworldNews/HR): ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉತ್ತಮ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, "ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯವಾಗಿದ್ದು, ಕೊರೊನಾ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ" ಎಂದರು.
ಇನ್ನು ಈಗ ಕೊರೊನಾ ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದ್ದು, ಕೊರೊನಾ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ" ಎಂದಿದ್ದಾರೆ.
ಕರ್ನಾಟಕ ರಾಜ್ಯವು ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿಯೂ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದು ತಿಳಿಸಿದರು.
ಇನ್ನು "ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ" ಎಂದು ಹೇಳಿದ್ಡಾರೆ.