ಶಿವಮೊಗ್ಗ, ಮೇ.24 (DaijiworldNews/HR): "ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೊನಾ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು" ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, "ಕೊರೊನಾ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾಗಿದ್ದು, ಕೊರೊನಾ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ" ಎಂದರು.
ಇನ್ನು ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ" ಎಂದಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿನ ಮನೆಗಳಲ್ಲಿ ಈಗಲೂ ಒಟ್ಟು ಕುಟುಂಬ ಪದ್ಧತಿ ಇದ್ದು, ಇಂತಹ ಮನೆಗಳಲ್ಲಿ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಅಸಾಧ್ಯವಾದುದರಿಂದ ಸೋಂಕು ಹೆಚ್ಚಾಗುವ ಸಂಭವವೆ ಜಾಸ್ತಿ. ಆದ್ದರಿಂದ ಸೋಂಕಿತರಿಗೆ ಮನೆಯಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡದೆ, ಅವರಿಗಾಗಿ ಕಲ್ಪಿಸಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ಕಳುಹಿಸಿ ಕೊಡಬೇಕು. ಸ್ಥಳೀಯ ಜನಪ್ರತಿನಿಧಿಗಳೂ ಕೂಡ ಸಹಕರಿಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.
ಇನ್ನು "ಸೋಂಕನ್ನು ನಿಯಂತ್ರಿಸುವುದಕ್ಕಾಗಿ ಪಂಚಾಯಿತಿ ಸಿಬ್ಬಂದಿಗಳನ್ನೂ ಕೂಡ ಇತರೆ ಇಲಾಖೆಗಳ ಸಿಬ್ಬಂದಿಗಳಂತೆ ಕೊರೊನಾ ವಾರಿಯರ್ಸ್ಗಳೆಂದು ಪರಿಗಣಿಸಿ, ಅವರಿಗೆ ಎಲ್ಲಾ ರೀತಿಯ ನೆರವು ಸಹಕಾರ ಒದಗಿಸಲಾಗುವುದು, ಮತ್ತು ಸೋಂಕು ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಯನ್ನು ಉತ್ತಮ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಮೂವರನ್ನು ಉತ್ತಮ ಸೇವಕ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಲಾಗುವುದು" ಎಂದು ತಿಳಿಸಿದ್ದಾರೆ.