ಬೆಂಗಳೂರು, ಮೇ.25 (DaijiworldNews/HR): ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುವ ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರಿಗೆ 5 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಲಾಗುವುದು" ಎಂದಿದ್ದಾರೆ.
ಬಳ್ಳಾರಿಯ ವಿಮ್ಸ್ನಲ್ಲಿ ವೈದ್ಯೆಯ ಮೇಲೆ ಸೋಂಕಿತರ ಕುಟುಂಬ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, "ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡದಿರಲು ರಾಜ್ಯ ಸರಕಾರ ಕಾನೂನು ಜಾರಿಗೆ ತಂದಿದ್ದು, ಹಲ್ಲೆ ಮಾಡಿದವರರಿಗೆ 5 ವರ್ಷ ಸೆರೆ, 1 ಲಕ್ಷ ದಂಡ ವಿಧಿಸಲಾಗುವುದು. ವೈದ್ಯರು, ದಾದಿಯರೇ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ತಪ್ಪಿದ್ದರೆ ದೂರು ಕೊಡಿ. ಅಂತವರ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ" ಎಂದರು.
ಇನ್ನು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು,ಕೊರೊನಾದಿಂದ ವ್ಯಕ್ತಿ ಸಾವನ್ನಪ್ಪಿದ ಕಾರಣಕ್ಕೆ ಸಂಬಂಧಿಕರು ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.