ನವದೆಹಲಿ, ಮೇ.25 (DaijiworldNews/HR): ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಹಿಂಸಾಚಾರ ತಡೆಯಲು ನಿರ್ದೇಶನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಸರನ್ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಸುಪ್ರೀಂ ಪೀಠ, ಈ ಸಂಬಂಧ ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಪಿಂಕಿ ಆನಂದ್ ಅವರ ಕೋರಿಕೆಯ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಲು ಒಪ್ಪಿಕೊಂಡಿದೆ.
ಇನ್ನು ಹಿಂಸಾಚಾರದ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು ಮತ್ತು ಟಿಎಂಸಿ ಕಾರ್ಯಕರ್ತರ ಕಿರುಕುಳದಿಂದ ರಾಜ್ಯದಿಂದ ಸ್ಥಳಾಂತರಗೊಂಡ ಲಕ್ಷಾಂತರ ಜನರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್ 7 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.