ಬೆಂಗಳೂರು, ಮೇ 26 (DaijiworldNews/MS): ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ (104)ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೇ.26 ರ ಮಂಗಳವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
" ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿಯಿಂದ ಸ್ವಲ್ಪ ಆರೋಗ್ಯ ಹದಗೆಟ್ಟು ಇಂದು ಬೆಳಗ್ಗೆ ಉಸಿರಾಟಕ್ಕೆ ತೊಂದರೆ ಆಗಿತ್ತು. ತೀವ್ರ ನಿಗಾ ಘಟಕಕ್ಕೆ ಕರೆದುಕೊಂಡು ಬಂದ ಸ್ವಲ್ಪ ಹೊತ್ತಿಗೆ ಹೃದಯಾಘಾತದಿಂದಾಗಿ ಸಾವನ್ನಪ್ಪಿರುವುದಾಗಿ ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
1918 ಏಪ್ರಿಲ್ 10ರಂದು ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ ದೊರೆಸ್ವಾಮಿ ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಿದ್ದರು.
ಕೊವಿಡ್ ಮಾನದಂಡಗಳನ್ನು ಅನುಸರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ದೊರೆಸ್ವಾಮಿ ಅವರ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಂಬನಿ ಮಿಡಿದ ಗಣ್ಯರು:
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ನಾಡಿಗೆ ಎಚ್ಎಸ್ ದೊರೆಸ್ವಾಮಿ ಹಿರಿಯಣ್ಣನಂತೆ ಇದ್ದರು. ಅವರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪ್ರಮುಖರು. ತಮ್ಮ ಇಳಿವಯಸ್ಸಿನಲ್ಲಿಯೂ ತಮ್ಮ ಇಡೀ ಜೀವನವನ್ನು ಸಮಾಜಸೇವೆಗೆ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರೇರಣೆಯಿಂದ ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೊರೆಸ್ವಾಮಿ ಅವರ ನಿಧನ ಕರ್ನಾಟಕಕ್ಕೆ ಮಾತ್ರವಲ್ಲ, ದೇಶಕ್ಕೆ ತುಂಬಲಾರದ ನಷ್ಟ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.