ನವದೆಹಲಿ, ಮೇ.28 (DaijiworldNews/PY): ದೇಶದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗದ ಕಾರಣ ಅಂತರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಜೂನ್ 30ರವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
"ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ" ಎಂದು ವಿಮಾನಯಾನ ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.
"ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಈ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ವಿಸ್ತರಿಸಲಾಗಿದೆ. ಇದಕ್ಕೂ ಮುನ್ನ ಮೇ 31ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧವು ಭಾರತದಿಂದ ಹೊರಡುವ ಹಾಗೂ ಭಾರತಕ್ಕೆ ಬರುವ ಅಂತರಾಷ್ಟ್ರೀಯ ವಿಮಾನಗಳಿಗೆ ಅನ್ವಯವಾಗುತ್ತದೆ" ಎಂದು ಹೇಳಿದೆ.
"ಅಂತರಾಷ್ಟ್ರೀಯ ಕಾರ್ಗೋ ವಿಮಾನಗಳಿಗೆ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅನುಮತಿ ಪಡೆದ ನಿರ್ದಿಷ್ಟವಾದ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ. ಕೆಲವು ವಿಮಾನಗಳಿಗೆ ಮಾತ್ರವೇ ಅನಿವಾರ್ಯ ಸಂದರ್ಭಗಳಲ್ಲಿ ಆದ್ಯತೆಯ ಮೇರೆಗೆ ಆಯ್ದ ದೇಶಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು" ಎಂದು ತಿಳಿಸಿದೆ.