ಬೆಂಗಳೂರು, ಜೂ.01 (DaijiworldNews/HR): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಅವರು ಕೊರೊನಾ ಪರೀಕ್ಷೆಗೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದ್ದು, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.
ಇನ್ನು ವೈದ್ಯರ ಸಲಹೆ ಮೇರೆಗೆ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಿಗದಿಪಡಿಸಲಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.
ಇಂದು ಬೆಂಗಳೂರಿನ ಅನೇಕ ಕ್ಷೇತ್ರಗಳಿಗೆ ತೆರಳಿ ಉಚಿತ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಬೆಂಗಳೂರಿನ ವಿವಿಧೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಟ್ ವಿತರಣೆ ಮಾಡಲಿದ್ದಾರೆ.