ಬೆಂಗಳೂರು, ಜೂ.03 (DaijiworldNews/HR): ಕೇರಳಕ್ಕೆ ಗುರುವಾರ ಮುಂಗಾರು ಮಳೆ ಪ್ರವೇಶಿಸಲಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದ್ದು, ಮುಂಗಾರು ಪ್ರವೇಶದಿಂದ ಇಂದು ಕೇರಳದಲ್ಲಿ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯ ಅಬ್ಬರವಿರಲಿರುವುದರಿಂದ 4 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಾಂಧರ್ಭಿಕ ಚಿತ್ರ
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕೇರಳ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಇಂದಿನಿಂದ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಇಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಇನ್ನು ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕಕ್ಕೆ ಜೂನ್ 5 ಅಥವಾ 6ರಂದು ಮುಂಗಾರಿನ ಪ್ರವೇಶವಾಗಲಿದ್ದು, ಇಂದಿನಿಂದ ಜೂನ್ 5ರವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.