ಬೆಳಗಾವಿ, ಜೂ 4(DaijiworldNews/MS): "ಎಸೆಸೆಲ್ಸಿ ಪರೀಕ್ಷೆ ನಡೆಸುವುದು ಸದ್ಯದ ತಾತ್ಕಾಲಿಕ ನಿರ್ಧಾರವಾಗಿದ್ದು ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಗೆ ಬಂದರೆ ಮಾತ್ರ ಎಸೆಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು" ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಯಾವುದೇ ಕಾರಣಕ್ಕೂ ಪೋಷಕರು ಹಾಗೂ ವಿದ್ಯಾರ್ಥಿಗಳು ಗಾಬರಿಪಡಬೇಕಾದ ಅವಶ್ಯಕತೆ ಇಲ್ಲ. ಒಂದು ವೇಳೆ ಕೊರೋನಾ ಪ್ರಕರಣಗಳು ಹೆಚ್ಚಾದರೆ, ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಡಲಾಗುತ್ತದೆ. ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಬಿಎಸ್ವೈ " ಹೇಳಿದ್ದಾರೆ.
"ಈ ಬಾರಿ ವಿಭಿನ್ನ ಮಾದರಿಯಲ್ಲಿ ಜುಲೈ 3ನೇ ವಾರದಲ್ಲಿಎಸೆಸೆಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಆದರೆ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಹಾಗೂ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡಲಾಗುವುದಿಲ್ಲ " ಎಂದು ಇಂದಿನ ಪತ್ರಿಕಾಗೋಷ್ಟಿಯಲ್ಲಿ ಸುರೇಶ್ ಕುಮಾರ್ ತಿಳಿಸಿದ್ದರು.