ಬೆಂಗಳೂರು, ಜೂ 05 (DaijiworldNews/MS): ಕೋವಿಡ್ ಕಾರಣದಿಂದ ದ್ವಿತೀಯ ಪಿಯು ಅಂತಿಮ ವರ್ಷದ ಪರೀಕ್ಷೆ ರದ್ದು ಪಡಿಸಲಾಗಿದ್ದು, ವಿದ್ಯಾರ್ಥಿಗಳ ಮಾನದಂಡಕ್ಕೆ ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರ ಹಾಗೂ ಇದರೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕವನ್ನೂ ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.