ಮೈಸೂರು, ಜೂ.06 (DaijiworldNews/HR): ಮೈಸೂರು ಐಎಎಸ್ ಅಧಿಕಾರಿಗಳ ನಡುವೆ ಕಳೆದ ಹಲವು ದಿನಗಳಿಂದ ಮುಂದುವರೆಯುತ್ತಿದ್ದ ಜಟಾಪಟಿಗೆ ರಾಜ್ಯ ಸರ್ಕಾರ ಅಂತ್ಯ ನೀಡಿದ್ದು, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ನಿರ್ವಹಣೆ ಸಂಬಂಧ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವೆ ವಾಗ್ವಾದ ಏರ್ಪಟ್ಟಿದ್ದು, ಬಳಿಕ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ಕೂಡ ನೀಡಲಾಗಿತ್ತು. ಇದೀಗ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಣಿ ಸಿಂಧೂರಿ ಅವರನ್ನು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.