ಬೆಂಗಳೂರು, ಜೂ 8 (DaijiworldNews/MS): ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ (77) ಅವರು ಜೂ ೮ ರ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಉದಾಸಿ ಅವರು ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಅರೋಗ್ಯದಲ್ಲಿ ಏರುಪೇರಾದ ಕಾರಣ ಉದಾಸಿ ಅವರನ್ನು ಮೇ.25ರಂದು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬೊಮ್ಮಾಯಿ ಆಸ್ಪತ್ರೆಗೆ ಬೇಟಿ ನೀಡಿ ಅವರ ಅರೋಗ್ಯದ ಬಗ್ಗೆ ವಿಚಾರಿಸಿದ್ದರು.
ಬುಧವಾರ ಹಾನಗಲ್ ಗೆ ಮೃತದೇಹ ಕೊಂಡೊಯ್ದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ.
1983 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯನ್ನು ಪಕ್ಷೇತರರಾಗಿ ಪ್ರವೇಶಿಸಿದ್ದರು. ಉದಾಸಿ ಅವರು ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಾರಿಗೆ, ಲೋಕೋಪಯೋಗಿ ಖಾತೆಯನ್ನು ನಿರ್ವಹಿಸಿದ್ದರು.
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.