ಬೆಂಗಳೂರು, ಜೂ.10 (DaijiworldNews/HR): ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಗೆ ಸದ್ಯ ಮುಕ್ತಾಯ ಹಾಡಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಅರುಣ್ ಸಿಂಗ್, "ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಪ್ರವಾಸದ ವೇಳೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು" ಎಂದರು.
"ಕೊರೊನಾ ಸಂಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಕೇವಲ ಅಂತೆ ಕಂತೆಯ ಸುದ್ದಿ ಅಷ್ಟೆ" ಎಂದು ಸ್ಪಷ್ಟನೆ ನೀಡಿದ್ದಾರೆ.