ಬೆಂಗಳೂರು, ಜೂ 10 (DaijiworldNews/MS): ಕೋವಿಡ್ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ನಿಯಮ ಉಲ್ಲಂಘಿಸಿ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ದಂಪತಿ ಪೂಜೆ ಸಲ್ಲಿಸಿದ್ದಕ್ಕೆ ಸಂಬಂಧಿಸಿದ ಆರೋಪವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ.
ಘಟನೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಲ್ಲದೆ, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ಪತ್ನಿ ಸಹಿತ ದೇವಾಲಯಕ್ಕೆ ಭೇಟಿ ನೀಡಿದ್ದೆಷ್ಟು ಸರಿ? ಕೋವಿಡ್ ನಿಯಮದ ಉಲ್ಲಂಘನೆ ಮಾಡಲಾಗಿದೆ. ಜನಸಾಮಾನ್ಯರಿಗೊಂದು ನಿಯಮ, ಜನಪ್ರತಿನಿಧಿಗಳಿಗೊಂದು ನಿಯಮವೇ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.