ಚಂಡೀಗಢ, ಜೂ.12 (DaijiworldNews/HR): 2022ರಲ್ಲಿ ನಡೆಯುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಶಿರೋಮಣಿ ಅಕಾಲಿದಳ ಘೋಷಿಸಿದೆ ಎಂದು ವರದಿಯಾಗಿದೆ.
ಶಿರೋಮಣಿ ಅಕಾಲಿ ದಳವು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಜಾರಿಗೊಳಿಸಿದ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದು, ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವುದಾಗಿ ಘೋಷಿಸಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ 117 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಅಕಾಲಿ ದಳ ಸ್ಪರ್ಧಿಸಲಿದೆ ಎನ್ನಲಾಗಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಪಂಜಾಬ್ ರಾಜ್ಯದ ರಾಜಕೀಯದಲ್ಲಿ ಹೊಸ ದಿನಗಳು ಆರಂಭವಾಗಿವೆ" ಎಂದಿದ್ದಾರೆ.
ಇನ್ನು 1996ರ ಲೋಕಸಭಾ ಚುನಾವಣೆಯ 27 ವರ್ಷಗಳ ಬಳಿಕ ಅಕಾಲಿ ದಳ ಮತ್ತು ಬಿಎಸ್ಪಿ ಮತ್ತೆ ಕೈಜೋಡಿಸಿದೆ.