ಬೆಂಗಳೂರು, ಜೂ 12 (DaijiworldNews/PY): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಎಸ್ಐಟಿ ಮುಂದೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಬ್ಯ್ಲಾಕ್ ಮೇಲ್ ಪ್ರಕರಣದಲ್ಲಿ ಅವರು ತನಿಖೆಗೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಠಾಣೆಯ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ನರೇಶ್ ಗೌಡ ಹಾಗೂ ಶ್ರವಣ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಬ್ಲ್ಯಾಕ್ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕೂಡಾ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ಬಳಿಕ ನರೇಶ್ ಗೌಡ ಹಾಗೂ ಶ್ರವಣ್ ಮೇಲೆ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ಮೇಲ್ ಆರೋಪವನ್ನು ಮಾಡಿದ್ದರು. ಈ ಪ್ರಕರಣದಲ್ಲಿ ಇಬ್ಬರು ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ತನಿಖೆಯ ಬಳಿಕ ಮಾಹಿತಿ ತಿಳಿದುಬರಬೇಕಿದೆ.