ಬೆಂಗಳೂರು, ಜೂ 13 (DaijiworldNews/PY): "ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ದಕ್ಷಿಣ ಕನ್ನಡ ಸೇರಿದಂತೆ, ಉಡುಪಿ, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ಬೀದರ್, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಾಧಾರ ನದಿ ತುಂಬಿ ಹರಿಯುತ್ತಿದೆ. ಇನ್ನು ಕಾರ್ಕಳ ಸೇರಿದಂತೆ ಬಾಳೆಹೊನ್ನೂರು, ಕೊಟ್ಟಿಗೆಹಾರ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.
"ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಭಾರೀ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.