ಬೆಂಗಳೂರು, ಜೂ 13 (DaijiworldNews/PY): ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದಾರೆ.
ಜೂನ್ 12ರ ಶನಿವಾರ ರಾತ್ರಿ ಸ್ನೇಹಿತನೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.
ವಿಜಯ್ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಕಾರಣ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರ ತೊಡೆಯ ಮೂಳೆ ಕೂಡಾ ಮುರಿದಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಮುಖ್ಯ ನ್ಯೂರೋ ಸರ್ಜನ್ ಡಾ.ಅನಿಲ್ ಕುಮಾರ್, "ವಿಜಯ್ ಅವರ ಆಸ್ಪತ್ರೆಗೆ ಕರೆತಂದ ಸಂದರ್ಭ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನ್ ಮಾಡಿದ ವೇಳೆ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹಾಗಾಗಿ ಅವರಿಗೆ ಮೆದುಳಿನ ಆಪರೇಷನ್ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.