ಲಕ್ನೋ, ಜೂ 14(DaijiworldNews/MS): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆಮ್ ಆದ್ಮಿ ಪಕ್ಷ ಮತ್ತು ಸಮಾಜವಾದಿ ಪಕ್ಷ ಭಾನುವಾರ ಭ್ರಷ್ಟಾಚಾರದ ಆರೋಪ ಮಾಡಿದ್ದು ಆಪಾದಿತ ಆರ್ಥಿಕ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಪಕ್ಷಗಳು ಒತ್ತಾಯಿಸಿವೆ.
ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸದಸ್ಯ ಪವನ್ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದಾರೆ.
12,080 ಚದರ ಮೀಟರ್ 5.8 ಕೋಟಿ ಮೌಲ್ಯದ ಒಂದು ತುಂಡು ಭೂಮಿಯನ್ನು ಮೊದಲು ಸುಲ್ತಾನ್ ಅನ್ಸಾರಿ ಮತ್ತು ರವಿ ಮೋಹನ್ ತಿವಾರಿ ಎಂಬ ಇಬ್ಬರು ವ್ಯಕ್ತಿಗಳು 2 ಕೋಟಿ ರೂ.ಗೆ ಖರೀದಿಸಿದ್ದಾರೆ. ಆ ಬಳಿಕ ಕೆಲವೇ ನಿಮಿಷಗಳಲ್ಲಿ ರಾಮ್ ಜನ್ಮಭೂಮಿ ಟ್ರಸ್ಟ್ಗೆ 18.5 ಕೋಟಿ ರೂ.ಗೆ ಮಾರಾಟ ಮಾಡಲಾಯಿತು ಎಂದು ಆರೋಪಿಸಿದ್ದಾರೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಂತಿದ್ದು, ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನಕಾರ್ಯದರ್ಶಿ ಚಂಪತ್ ರಾಯ್ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.