ಬೆಂಗಳೂರು, ಜೂ 15( DaijiworldNews/MS): ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ (37) ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ.
ಅಪಘಾತದಿಂದ ತಲೆಗೆ ತೀವ್ರ ಪೆಟ್ಟಾಗಿದ್ದ ಹಿನ್ನಲೆಯಲ್ಲಿ ವೈದ್ಯರು ಅಂಗಾಂಗ ದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಕ್ಲಿನಿಕಲ್ ಡೆಡ್ ಎಂದು ಘೋಷಿಸಿದ್ದು,ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಇದರಂತೆ ಆಸ್ಪತ್ರೆ ಹಾಗೂ ಪೊಲೀಸರ ಅಂತಿಮ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿಜಯ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಸಂಚಾರಿ ವಿಜಯ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8ರಿಂದ 10ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ನಂತರ ಸಂಜೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.