ಬೆಂಗಳೂರು, ಜೂ.15 (DaijiworldNews/HR): "ಸರ್ಕಾರವೇ ಶೈಕ್ಷಣಿಕ ಶುಲ್ಕವನ್ನು ನಿರ್ಧರಿಸಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ನಿವಾರಿಸುಬೇಕು" ಎಂದು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, "ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು" ಎಂದು ಆಗ್ರಹಿಸಿದ್ದಾರೆ.
ಇನ್ನು "ಕಳೆದ ವರ್ಷದಿಂದ ಕೊರೊನಾದಿಂದಾಗಿ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ" ಎಂದರು.
"ಲಾಕ್ಡೌನ್ ಹಾಗೂ ಕೊರೊನಾದ ಅಬ್ಬರದಿಂದ ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದ್ದು, ಸರ್ಕಾರ ಕೂಡ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ" ಎಂದಿದ್ದಾರೆ.
ಇನ್ನು "ಈ ಎಲ್ಲಾ ಸಮಸ್ಯೆಗಳಿಂದ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಿ, ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು" ಎಂದು ತಿಳಿಸಿದ್ದಾರೆ.