ನವದೆಹಲಿ, ಜೂ 16 (DaijiworldNews/MS): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವಂತೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸಕ್ಕೆ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕೆಲ ಸಚಿವರ, ಶಾಸಕರ ಅಸಮಾಧಾನ, ಮಾತ್ರವಲ್ಲದೆ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆಯೂ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅರುಣ್ ಸಿಂಗ್ ಭೇಟಿಗೂ ಮೊದಲೇ ಡಿವಿಎಸ್ ರಿಂದ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.