ನವದೆಹಲಿ, ಜೂ 20 (DaijiworldNews/PY): ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ದ ಪ್ರಕರಣ ದಾಖಲಿಸಲು ಹಾಗೂ ಕಠಿಣ ಸಾಂಕ್ರಾಮಿಕ ರೋಗ ಕಾಯ್ದೆ 2020 ಅನ್ನು ಜಾರಿಗೆ ತರಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಕೊರೊನಾ ನಡುವೆ ದೇಶದ ಹಲವು ಕಡೆಗಳಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲಿನ ದಾಳಿ ಹಿನ್ನೆಲೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, "ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲಿನ ಹಲ್ಲೆಯಿಂದ ಅವರ ನೈತಿಕ ಸ್ಥೈರ್ಯ ಕುಂದುವ ಸಾಧ್ಯತೆ ಇದೆ. ಇದರಿಂದ ಆರೋಗ್ಯ ವ್ಯವಸ್ಥೆಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವ ಸಾಧ್ಯತೆ ಇದೆ" ಎಂದಿದ್ದಾರೆ.
"ಸದ್ಯದ ಪರಿಸ್ಥಿತಿಯಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದು ಕಡ್ಡಾಯ" ಎಂದು ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ.
"ಹಲ್ಲೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಬೇಕು. ಈ ರೀತಿಯಾದ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ಹಲ್ಲೆ ನಡೆಸುವವರ ವಿರುದ್ದ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ 2020ರ ಅನ್ವಯ ಶಿಕ್ಷೆ ನೀಡಬಹುದು" ಎಂದಿದ್ದಾರೆ.
ಈ ಕಾನೂನಿನ ಪ್ರಕಾರ, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ದ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಐದು ಲಕ್ಷ ರೂ. ದಂಡ ವಿಧಲಾಗುತ್ತದೆ.