ಬೆಂಗಳೂರು, ಜೂ. 20 (DaijiworldNews/HR): ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಇನ್ನು ಚಕ್ರವರ್ತಿ ಸೂಲಿಬೆಲೆ ಅವರು ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, "ಕಾಂಗ್ರೆಸ್ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿದ್ದು, ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದು ಹೇಳಿದ್ದರು.
ಚಕ್ರವರ್ತಿ ಸೂಲಿಬೆಲೆ ಅವರು ಹೇಳಿರುವುದು ಸುಳ್ಳು ಆರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.