ನವದೆಹಲಿ, ಜೂ 21 (DaijiworldNews/PY): ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಹಿರಿಯ ವಕೀಲ ಎಸ್.ಬಿ.ಉಪಾಧ್ಯಾಯ ಮತ್ತು ಇತರ ವಕೀಲರು ಮಂಡಿಸಿದ ವಾದವನ್ನು ಎರಡು ಗಂಟೆಗಳ ಕಾಲ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಂ.ಆರ್. ಷಾ ಅವರನ್ನೊಳಗೊಂಡ ವಿಶೇಷ ರಜಾಕಾಲದ ಪೀಠ ಆಲಿಸಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲದ್ದರಿಂದ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿತ್ತು.
"ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ಒದಗಿಸುವುದು ಸೇರಿದಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 12 ಅಡಿಯಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ಸಾಮಾನ್ಯ ಕನಿಷ್ಠ ಪರಿಹಾರದ ಕ್ರಮ ಕೈಗೊಳ್ಳಲಾಗಿದೆ" ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.